ಶಿವಪುರಾಣದಲ್ಲಿ ಶಿವರಾತ್ರಿಯ ಆಚರಣೆ ಬಂದಿರುವ ಬಗ್ಗೆ ಒಂದು ಸಣ್ಣ ಕಥೆ ಇದೆ…. ದೇವಲೋಕದಲ್ಲಿ ಒಮ್ಮೆ ಬ್ರಹ್ಮ ಹಾಗೂ ವಿಷ್ಣುವಿನ ನಡುವೆ ಯಾರು ಶ್ರೇಷ್ಠರು ಎಂಬ ವಿಷಯಕ್ಕೆ ವಾಗ್ವಾದಗಳು ನಡೆಯುತ್ತಿದ್ದವು. ಮಹಾ ದೇವತೆಗಳಿಬ್ಬರನ್ನೂ ಸಮಾಧಾನ ಮಾಡುವುದು ದುರ್ಲಭ ಎನಿಸಿದಾಗ, ದೇವತೆಗಳೆಲ್ಲ ಹೋಗಿ ಪರಶಿವನನ್ನು ಬೇಡಿಕೊಳ್ಳುತ್ತಾರೆ. ವಿಷ್ಣು ಹಾಗೂ ಬ್ರಹ್ಮರ ಜಗಳವನ್ನು ಶಮನ ಮಾಡುವಂತೆ ಕೋರಿಕೊಳ್ಳುತ್ತಾರೆ. ಆಗ ವಿಷ್ಣು ಮತ್ತು ಬ್ರಹ್ಮರ ನಡುವೆ ಶಿವ, ಅಗ್ನಿಕಂಭದ ರೂಪದಲ್ಲಿ ಬಂದು ನಿಂತು ತನ್ನ ಮೂಲವನ್ನು ಕಂಡುಹಿಡಿಯಲು ಸೂಚಿಸುತ್ತಾನೆ.
ಆಗ ಹಂಸದ ರೂಪ ತಾಳಿದ ಬ್ರಹ್ಮ ಅಗ್ನಿ ಕಂಭದ ಶಿರವನ್ನು ಹುಡುಕಲು ಮೇಲ್ಮುಖವಾಗಿ ಹೊರಡುತ್ತಾನೆ. ವಿಷ್ಣು ವರಾಹವತಾರ ತಾಳಿ ಕಂಭದ ತಳವನ್ನು ನೋಡುವುದಕ್ಕಾಗಿ ಪಾತಾಳಕ್ಕೆ ಇಳಿಯುತ್ತಾನೆ. ಎಷ್ಟೇ ಮುಂದೆ ಸಾಗಿದರೂ ಬ್ರಹ್ಮ ಹಾಗೂ ವಿಷ್ಣು ಇವರಿಬ್ಬರಿಗೂ ಕಂಭದ ಅಂತ್ಯವೇ ಕಾಣುವುದಿಲ್ಲ. ಅನಂತವಾಗಿರುವ ಶಿವನ ಶಕ್ತಿಯನ್ನು ನೋಡಿದ ವಿಷ್ಣು ಹಾಗೂ ಬ್ರಹ್ಮರಿಗೆ ಸತ್ಯದ ಅರಿವಾಗುತ್ತದೆ. ಆದರೆ ಶಿವನ ಜಡೆಯಿಂದ ಕೆಳಗೆ ಬೀಳುತ್ತಿದ್ದ ಕೇತಕಿ ಪುಷ್ಫದ ಬಳಿ ಬ್ರಹ್ಮ , ನೀನು ಎಲ್ಲಿಂದ ಬೀಳುತ್ತಿದ್ದೀಯ ಎಂದು ಪ್ರಶ್ನಿಸುತ್ತಾನೆ. ಆಗ ಆ ಪುಷ್ಪವು ನಾನು ಅಗ್ನಿ ಕಂಭದ ಶಿರದಿಂದ ಬೀಳುತ್ತಿದ್ದೇನೆ ಎಂಬ ಉತ್ತರ ನೀಡುತ್ತದೆ. ಆಗ ಬ್ರಹ್ಮ ಶಿವನಲ್ಲಿಗೆ ಬಂದು ಕೇತಕಿ ಪುಪ್ಪವನ್ನು ತೋರಿಸಿ, ತಾನು ಅಗ್ನಿ ಕಂಭದ ಶಿರಭಾಗವನ್ನು ನೋಡಿರುವುದಾಗಿಯೂ ಅಲ್ಲಿಂದಲೇ ಕೇತಕಿ ಪುಷ್ಪವನ್ನು ತಂದಿರುವುದಾಗಿಯೂ ಹೇಳುತ್ತಾನೆ. ಇವರಿಬ್ಬರ ಮೋಸವನ್ನು ಅರಿತ ಶಿವ, ಬ್ರಹ್ಮನನ್ನು ಯಾರೂ ಪೂಜಿಸಕೂಡದು ಎಂದು ಶಾಪ ನೀಡಿ ಲಿಂಗರೂಪ ತಾಳುತ್ತಾನೆ. ಅಂದು ಮಾಘ ಮಾಸದ ಬಹುಳ ಚತುರ್ದಶಿಯಾಗಿರುತ್ತದೆ. ಹೀಗಾಗಿ, ಶಿವ ಲಿಂಗರೂಪ ತಾಳಿದ ಮಾಘ ಮಾಸದ ಬಹುಳ ಚತುರ್ದಶಿಯಂದು ಶಿವರಾತ್ರಿಯನ್ನು ಆಚರಿಸಲಾಗುತ್ತದೆ.
ಶಿವರಾತ್ರಿಯ ದಿನ ರಾತ್ರಿ ಪೂಜೆಯೇ ವಿಶೇಷ. ಸಾಮಾನ್ಯವಾಗಿ ಎಲ್ಲ ಹಬ್ಬಗಳಲ್ಲಿಯೂ ದೇವರಿಗೆ ಹಗಲು ಪೂಜೆ ನಡೆಯುತ್ತದೆ. ಆದರೆ ಶಿವರಾತ್ರಿ ಮಾತ್ರ ರಾತ್ರಿಯ ಹೊತ್ತು ಪೂಜೆ, ಭಜನೆ ನಡೆಸುವ ವಿಶೇಷ ಆಚರಣೆ. ರಾತ್ರಿ ಎಂದರೆ ಕತ್ತಲು, ಕತ್ತಲು ಎಂದರೆ ಅಜ್ಞಾನ. ಅಜ್ಞಾನವನ್ನು ಕಳೆದು ಸುಜ್ಞಾನ ಬೆಳಗಿಸು ಎಂದು ಆ ಶಿವನನ್ನು ಬೇಡುವ ಶುಭ ದಿನವೇ ಶಿವರಾತ್ರಿ. ಅಜ್ಞಾನ ತುಂಬಿರುವಲ್ಲಿ ಶಿವ ಸಂಚರಿಸಿ ಜ್ಞಾನ ದೀವಿಗೆಯನ್ನು ಬೆಳಗುತ್ತಾನೆ ಎಂಬ ನಂಬಿಕೆ ಇದೆ.
ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ.
ಎಲ್ಲಾ ಜೀವರಾಶಿಗಳನ್ನು ಪೊರೆಯುವ ಶಿವ ಎಲ್ಲಾ ಆಡಂಬರಗಳಿಂದ ಮುಕ್ತ. ಆತ ಆಭರಣಪ್ರಿಯನಲ್ಲ, ಅಲಂಕಾರ ಪ್ರಿಯನೂ ಅಲ್ಲ. ಭಸ್ಮವನ್ನು ಬಳಿದುಕೊಂಡು, ಹುಲಿಯ ಚರ್ಮವನ್ನು ಉಟ್ಟು, ಸ್ಮಶಾನದಲ್ಲಿರುವ ಸರಳ ಮತ್ತು ಅಮೋಘ ಶಕ್ತಿ.
ಶಿವನು ಸರಳತೆ, ಪ್ರಾಮಾಣಿಕತೆ ಮತ್ತು ನಿಷ್ಕಲ್ಮಶ ಮನಸ್ಸುಗಳ ಪ್ರತೀಕ. ಛಲಬಿಡದ ಸಾಧನೆಯ ದ್ಯೋತಕ. ಧ್ಯಾನಪ್ರಿಯ ಶಿವ ಭಕ್ತರಿಂದ ಬಯಸುವುದು ನಿಶ್ಕಲ್ಮಶ ಮತ್ತು ಪ್ರಾಮಾಣಿಕ ಭಕ್ತಿ ಮಾತ್ರ. ತೋರಿಕೆಯ ಮತ್ತು ಆಡಂಬರದ ಪೂಜೆಯನ್ನು ಬಯಸದ ಮಹಾದೇವನನ್ನು ಇಂದ್ರಿಯ ನಿಗ್ರಹ, ಧ್ಯಾನ, ಸಂಯಮ ಮತ್ತು ವಿಶ್ವಾಸ ಭರಿತರಾಗಿ ಶಿವರಾತ್ರಿ ಯಂದು ಧ್ಯಾನಿಸಿದರೆ ಆತ ಪ್ರಸನ್ನಗೊಳ್ಳುತ್ತಾನೆ.
ಶಿವರಾತ್ರಿಯ ಮಹಿಮೆ:
ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನ. ಶಿವರಾತ್ರಿಯಂದು ತನ್ನನ್ನು ಪೂಜಿಸುವ ಭಕ್ತರಿಗೆ ತಾನು ವಿಶೇಷವಾಗಿ ಅನುಗ್ರಹ ನೀಡುವುದಾಗಿ ಸ್ವತ: ಶಿವನೇ ಪಾರ್ವತಿಯಲ್ಲಿ ಅರುಹಿದ್ದಾನೆ ಎನ್ನುತ್ತದೆ ಶಿವಪುರಾಣ. ಶಿವ-ಪಾರ್ವತಿಯರ ವಿವಾಹ ಮಹೋತ್ಸವದ ದಿನವಿದು ಎಂಬುದು ವಿಶೇಷ. ಹಿಮವಂತನ ಮಗಳು ಪಾರ್ವತಿ ಈ ದಿನದಂದು ರಾತ್ರಿಯಿಡಿ ಶಿವನಾಮ ಪಠಿಸುತ್ತಾ, ತಪಸ್ಸು ಮಾಡಿ, ಶಿವನನ್ನು ಮೆಚ್ಚಿಸಿ, ವಿವಾಹವಾದಳೆಂಬುದು ಪ್ರತೀತಿ. ಶಿವ ರುದ್ರತಾಂಡವನಾಡಿದ ರಾತ್ರಿಯೂ ಇಂದೇ ಎನ್ನಲಾಗುತ್ತದೆ. ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ. ಹಾಗಾಗಿ, ಭಕ್ತರು ಇಡೀ ರಾತ್ರಿ ಎಚ್ಚರವಿದ್ದು, ನೀಲಕಂಠನನ್ನು ಸ್ತುತಿಸುತ್ತಾರೆ. ಭಗೀರಥನ ತಪಸ್ಸಿಗೆ ಮೆಚ್ಚಿ ಇಳೆಗೆ ಇಳಿದು ಬಂದ ಗಂಗೆಯನ್ನು ಶಿವ ತನ್ನ ಜಡೆಯಲ್ಲಿ ತುಂಬಿಸಿಕೊಂಡಿದ್ದ. ಇದರಿಂದ ವಿಚಲಿತನಾದ ಭಗೀರಥ ಗಂಗೆಯನ್ನು ಭೂಮಿಗೆ ಹರಿಸುವಂತೆ ಶಿವನನ್ನು ಪ್ರಾರ್ಥಿಸಿದ. ಆತನ ಭಕ್ತಿಗೆ ಮೆಚ್ಚಿ ಶಿವ ಗಂಗೆಯನ್ನು ಹರಿಯಬಿಟ್ಟಿದ್ದು ಇದೇ ದಿನ ಎನ್ನುತ್ತದೆ ಪುರಾಣ. ಲಿಂಗಪುರಾಣದ ಪ್ರಕಾರ, ಲಿಂಗ ರೂಪಿಯಾಗಿ ಭಕ್ತರಿಗೆ ಅನುಗ್ರಹ ನೀಡಿದ ದಿನವಿದು. ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.
ಶಿವರಾತ್ರಿ ಆಚರಣೆ ಹಿನ್ನೆಲೆ:
1. ಪ್ರತಿ ಸಂವತ್ಸರದಲ್ಲಿ ಶಿಶಿರ ಋತುವಿನ ಮಾಘ ಮಾಸದ ಕೃಷ್ಣಪಕ್ಷ ಚತುರ್ದಶಿಯಂದು ರಾತ್ರಿ ಸಮಯದಲ್ಲಿ ಶಿವ ಪಾರ್ವತಿ ಜೊತೆಯಲ್ಲಿ ಭೂಮಿಗೆ ಬರುತ್ತಾನೆ. ಭೂಮಿಯಲ್ಲಿ ಸಂಚರಿಸುತ್ತ ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣ ಗೊಳ್ಳುತ್ತಾನೆ. ಆ ಸಮಯದಲ್ಲಿ ಅಂದರೆ ಶಿವರಾತ್ರಿ ರಾತ್ರಿ ವೇಳೆಯಲ್ಲಿ ತನ್ನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಯೂ ಇದೆ.
2. ಸ್ಕಂದ ಪುರಾಣ ದಲ್ಲಿ ಶಿವರಾತ್ರಿ ಹಬ್ಬದ ಬಗ್ಗೆ ಉಲ್ಲೇಖವಿದೆ. ಶಿವರಾತ್ರಿಯು ಸಮಯ ಪೂಜೆಗೆ ಬಹು ಪ್ರಾಶಸ್ತ್ಯವಾದ ಸಮಯ. ಆ ದಿನ ರಾತ್ರಿಯಲ್ಲಿ ಮೋಡಗಳಿಲ್ಲದ ಶುಭ್ರ ಆಕಾಶ, ಮಂಗಳಕರ ನಾದ ಶುಭ್ರ ಚಂದ್ರ ಸ್ಪೂರ್ತಿ ಹುಟ್ಟಿಸುವ ಸಂವೇದನಾಶೀಲ ವಾತಾವರಣವನ್ನು ಕಾಣಬಹುದು. ಈ ಪರ್ವಕಾಲವು ಪೂಜೆಗೆ ಪ್ರಶಸ್ತವಾದ ಕಾಲವಾಗಿದ್ದು ಶಿವನ ಆರಾಧನೆ ಮಾಡಿದರೆ ಪಾಪ ಕರ್ಮಗಳನ್ನು ಕಳೆಯುತ್ತಾನೆ ಎಂಬ ಪ್ರತೀತಿ ಇದೆ.
3. ತ್ರಯೋದಶಿಯು ಶಕ್ತಿರೂಪವಾದರೆ,, ಚತುರ್ದಶಿಯು ಶಿವರೂಪ. ತ್ರಯೋದಶಿಯು ಚತುರ್ದಶಿಯಲ್ಲಿ ಅಂತರ್ಗತ ವಾಗಿದ್ದರೆ ಅದು ಶಿವಶಕ್ತಿಯೋಗ ವಾಗುತ್ತದೆ. ಅದೆ ಶಿವರಾತ್ರಿಯ ಸಮಯವೆಂದು ಉಕ್ತಿಯೊಂದರಲ್ಲಿ ಉಲ್ಲೇಖವಿದೆ. ಈ ಶುಭ ಪುಣ್ಯದಿನದಂದು ಬ್ರಹ್ಮ ವಿಷ್ಣು ಆದಿಯಾಗಿ ಶಿವನನ್ನು ಪೂಜಿಸಿದ್ದು ಶಿವನೆ ತನಗೆ ಶಿವರಾತ್ರಿ ಪ್ರಿಯವಾದ ದಿನವೆಂದು ಹೇಳಿರುವನೆಂದು ಪ್ರತೀತಿ ಇದೆ.
4. ದೇವತೆಗಳು ಮತ್ತು ಅಸುರರು ಅಮೃತಕ್ಕಾಗಿ ಸಮುದ್ರ ಮಂಥನ ಮಾಡುತ್ತಿರುವಾಗ ಮೊದಲು ಮಡಿಕೆ ತುಂಬ ಹಾಲಾಹಲ ಉತ್ಪತ್ತಿಯಾಯಿತು. ಆದ್ರೆ ದೇವತೆಗಳು, ಅಸುರರು ಯಾರೂ ಆ ಹಾಲಾಹಲವನ್ನು ಕುಡಿಯೋಕೆ ಮುಂದಾಗಲಿಲ್ಲ. ಆ ಹಾಲಾಹಲ ಇಡೀ ನಭೋಮಂಡಲವನ್ನೇ ನಾಶಮಾಡಬಲ್ಲ ಸಾಮರ್ಥ್ಯವನ್ನು ಹೊಂದಿತ್ತು. ಹೀಗಾಗಿ ಲೋಕ ಕಲ್ಯಾಣಕ್ಕಾಗಿ ಪರಶಿವನೇ ಆ ಹಾಲಾಹಲವನ್ನು ಕುಡಿದುಬಿಟ್ಟ. ಅದೇ ಸಮಯಕ್ಕೆ ಪತ್ನಿ ಪಾರ್ವತಿ ದೇವಿ ಬಂದು ಆ ವಿಷ ಶಿವನ ಹೊಟ್ಟೆ ಸೇರದಂತೆ ಗಂಟಲಲ್ಲೇ ತಡೆ ಹಿಡಿದಳು… ವ್ಯಕ್ತಿಗಳು ನಿದ್ರಿಸುತ್ತಿದ್ದರೆ ವಿಷವು ಬೇಗನೆ ದೇಹದ ತುಂಬ ಹರಡುತ್ತದೆ. ಹೀಗಾಗಿ ದೇವತೆಗಳೆಲ್ಲರೂ ಶಿವನ ಭಜನೆ ಮಾಡಿ ಶಿವನನ್ನು ಎಚ್ಚರವಿರಿಸಿದರು. ಹೀಗಾಗಿ ಈ ಪವಿತ್ರ ದಿನವನ್ನು ಶಿವರಾತ್ರಿ ಎಂದು ಆಚರಿಸಲಾಗುತ್ತದೆ.
ಉಪವಾಸ ಮತ್ತು ಜಾಗರಣೆಯ ಮಹತ್ವ
1. ಶಿವನನ್ನು ಪೂಜಿಸುವುದರಿಂದ ಕರುಣಾಮಯಿಯಾದ ಶಿವನು ಸರ್ವರನ್ನು ಅನುಗ್ರಹಿಸುತ್ತಾನೆ ಎಂಬ ಪ್ರತೀತಿ ಇದೆ.. ಬೇಡರ ಕಣ್ಣಪ್ಪನು ಶಿವನನ್ನು ಪೂಜಿಸಿದ್ದರಿಂದ ಅವನನ್ನು ಅನುಗ್ರಹಿಸಿ ಮುಕ್ತಿ ಮಾರ್ಗ ತೋರಿಸಿದನು. ‘ ಸ್ಕಂದ ಪುರಾಣ ‘ದ ಪ್ರಕಾರ ಬೇಡ ಚಂದನನಿಗೂ ಶಿವನು ಅನುಗ್ರ ನೀಡಿದ್ದಾನೆ. ‘ ಗರುಡ ಮತ್ತು ಅಗ್ನಿ ಪುರಾಣ ‘ ಗಳಲ್ಲಿ ಉಲ್ಲೇಖವಿರುವಂತೆ, ಬೇಡ ಸುಂದರ ಸೇನನಿಗೂ ಶಿವನು ಆಶೀರ್ವಾದಿಸಿದ್ದಾನೆ. ಹೀಗಾಗಿ ಮಹಾ ಶಿವರಾತ್ರಿಯಂದು ಉಪವಾಸ ಮಾಡಿ ಶಿವನಿಗೆ ಅಭಿಷೇಕ ಮಾಡಿ, ಬಿಲ್ವ ಪತ್ರೆಗಳನ್ನು ಅರ್ಪಿಸುವುದರಿಂದ ಎಲ್ಲರಿಗೂ ಸದ್ಗತಿ ಪ್ರಾಪ್ತವಾಯಿತು.
2. ಪ್ರತಿ ವರ್ಷದ ಶಿವರಾತ್ರಿಯ ಸಮಯದಲ್ಲಿ ಶಿವನು, ಪಾರ್ವತಿಯ ಜೊತೆಯಲ್ಲಿ ಭೂಮಿಗೆ ಆಗಮಿಸುತ್ತಾನೆ. ಭೂ-ಸಂಚಾರ ಮಾಡುತ್ತಾನೆ. ಎಲ್ಲ ಸ್ಥಾವರ ಜಂಗಮ ಲಿಂಗಗಳಲ್ಲಿ ಸಂಕ್ರಮಣಗೊಳ್ಳುತ್ತಾನೆ. ಹೀಗಾಗಿ ಶಿವರಾತ್ರಿಯ ಶಿವನನ್ನು ಯಾರು ಪೂಜಿಸುವರೋ ಅವರ ಪಾಪಗಳು ಪರಿಹಾರವಾಗುತ್ತವೆ ಎಂದು ಸ್ವತಃ ಶಿವನೇ ತಿಳಿಸಿದ್ದಾನೆ ಎಂಬುದರ ಬಗ್ಗೆ ಶಾಸ್ತ್ರೋಕ್ತಿ ಇದೆ.
3. ಮದುವೆಯಾಗದ ಹೆಣ್ಣುಮಕ್ಕಳು ಶಿವಗುಣರೂಪಿಯಾದ ಅನುರೂಪ ಪತಿಗಾಗಿ ಪ್ರಾರ್ಥಿಸಿದರೆ, ಮುತ್ತೈದೆಯರು ಪತಿಯ ಶ್ರೇಯೋಭಿವೃದ್ಧಿಗಾಗಿ ಪ್ರಾರ್ಥಿಸುವುದು ಸಂಪ್ರದಾಯ. ಶಿವರಾತ್ರಿಯಂದು ಶಿವನನ್ನು ಪೂಜಿಸಿದರೆ, ಸುಖ, ಶಾಂತಿ, ಸಮೃದ್ಧಿ ದೊರೆಯುವುದೆಂಬ ನಂಬಿಕೆ ಆಸ್ತಿಕರದು.
4. ಕರುಣಾಮಯಿಯಾದ ಶಿವನನ್ನು ಭಕ್ತಿ ಪೂರಕವಾಗಿ ಯಾರೇ ಪೂಜಿಸಿದರೂ ಅವರನ್ನು ಅನುಗ್ರಹಿಸುತ್ತಾನೆ. ಹಿಂದು ಮುಂದು ನೋಡದೇ ಅವರಿಗೆ ಬೇಡಿದ ವರಗಳನ್ನು ನೀಡುತ್ತಾನೆ. ಭಕ್ತಿಗೆ ಮರುಳಾಗುವ ಶಿವನು ಹೀಗೆ ತನ್ನ ಭಕ್ತರಿಗೆ ಬೇಡಿದ ವರವನ್ನು ನೀಡುವುದರ ಮೂಲಕ ಎಷ್ಟೋ ಸಲ ಸಂಕಟಕ್ಕೆ ಸಿಲುಕಿದ್ದೂ ಇದೆ. ಆದರೆ ಎಂಥದ್ದೇ ಸಂಕಟವಿದ್ದರೂ ಶಿವನು ಭಕ್ತರನ್ನು ಸದಾ ಅನುಗ್ರಹಿಸುತ್ತಲೇ ಇರುತ್ತಾನೆ.
ವೈಜ್ಞಾನಿಕವಾಗಿ ಶಿವರಾತ್ರಿಯ ಆಚರಣೆ
ಸೂರ್ಯ ಮತ್ತು ಚಂದ್ರರ ಚಲನೆಯಿಂದಾಗುವ ಎಲ್ಲಾ ಕಾಲ ವ್ಯತ್ಯಾಸಕ್ಕೆ ಈ ನಮ್ಮ ದೇಹ ಹೊಂದಿಕೊಳ್ಳ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ಈ ಹಬ್ಬದ ಆಚರಣೆ ಬಹು ಮುಖ್ಯ. ಈ ಸಮಯದಲ್ಲಿ ಚಳಿಗಾಲವು ಮುಗಿದು ಬೇಸಗೆಕಾಲವು ಪ್ರಾರಂಭಗೊಳ್ಳುವುದು. ಅಂದರೆ ಈ ದಿನದಂದು ಚಳಿಗಾಲ ಉತ್ತುಂಗದಲ್ಲಿದ್ದು ಅಂದು ಕೃಷ್ಣ ಪಕ್ಷದ ಕೊನೆಯ ದಿನವೂ ಆಗಿರುತ್ತದೆ. ಈ ದಿನದಲ್ಲಿ ಸೂರ್ಯನ ಶಾಖ ಕಡಿಮೆಯಾಗಿರುತ್ತದೆ ಮತ್ತು ಚಂದ್ರನ ಪ್ರಕಾಶವೂ ಕ್ಷೀಣಿಸಿರುತ್ತದೆ. ನಮ್ಮ ಪೂರ್ವಜರು ಇದನ್ನೆಲ್ಲಾ ಅರಿತೇ ಹಬ್ಬ ಹರಿದಿನಗಳನ್ನು ಆಚರಿಸುತ್ತಿದ್ದರು. ಈ ವ್ಯತ್ಯಯದ ಸಮಯದಲ್ಲಿ ನಮ್ಮ ದೇಹದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತವೆ. ಈ ಕಾಲ ವ್ಯತ್ಯಾಸದ ಸಮಯದಲ್ಲಿ ನಮ್ಮಲ್ಲಿ ಉಸಿರಾಟದ ತೊಂದರೆ (ನೆಗಡಿ, ಕೆಮ್ಮು, ಶೀತ ಮತ್ತಿತರೆ) ಬರುವುದು. ಈ ದಿನದಂದು ನಾವು ಮಾಡುವ ಶಿವನ ಪೂಜೆ, ಉಪವಾಸಗಳು ನಮಗೆ ತುಂಬಾ ಉಪಯುಕ್ತ. ಅಂದು ಪರಶಿವನಿಗೆ ನೀರಿನ ಅಭಿಷೇಕ ಮತ್ತು ಬಿಲ್ವ ಪತ್ರೆಯ ಪೂಜೆ. ಬಿಲ್ವ ಪತ್ರೆಯಲ್ಲಿ ಉಸಿರಾಟದ ತೊಂದರೆ ನಿವಾರಿಸುವ ಗುಣವಿದೆ. ಬಿಲ್ವವನ್ನು ಲಿಂಗದ ಮೇಲೆ ಹಾಕುವಾಗ ಅದರ ವಾಸನೆ ನಮ್ಮ ದೇಹದ ಒಳಗೆ ಹೋಗುವುದು. ಬಿಲ್ವವನ್ನು ಮೂಸಿ ಎಸೆಯುವುದು ಸರಿಯಾದ ವಿಧಾನ. ಶಿವನ ಲಿಂಗವು ಕಲ್ಲಿನದಾಗಿದ್ದು ಅದರ ಮೇಲೆ ನೀರನ್ನು ಸುರಿಯುವುದರಿಂದ ಬಹಳಷ್ಟು ಶಕ್ತಿ ಹೊರಹೊಮ್ಮುತ್ತದೆ. ಅದೊಂದು ವಿಶಿಷ್ಟ ಕಲ್ಲಿನಿಂದ ಮಾಡಿದ ಲಿಂಗವಾಗಿರುತ್ತದೆ.
ಪೂಜಿಸುವ ದೇಗುಲವನ್ನು ವಾಸ್ತುವಿನ ಪ್ರಕಾರ ಕಟ್ಟಿರುತ್ತಾರೆ. ಈ ಕ್ಷೇತ್ರದಲ್ಲಿ ಹೆಚ್ಚಿನ ಗುರುತ್ವಾಕರ್ಷಣವಿದ್ದು ಅದನ್ನು ಶಿವ ಶಕ್ತಿಯೆಂದೂ ಕರೆಯುವರು. ಇಲ್ಲಿ ಮಂತ್ರಗಳನ್ನು ಪಠಿಸುತ್ತಾ ವಿಶಿಷ್ಟ ಕಲ್ಲಿನಿಂದ ಕೆತ್ತಿರುವ ಲಿಂಗಕ್ಕೆ ನೀರಿನ ಅಭಿಷೇಕ ಮಾಡುವುದರಿಂದ ಸುತ್ತ ಮುತ್ತಲಿಗೆಲ್ಲಾ ಹೆಚ್ಚಿನ ಶಕ್ತಿ ಬರುವುದೆಂಬ ನಂಬಿಕೆ ಇದೆ.
ಕೃಪೆ : ಏನ್ ಸುದ್ದಿ